For the best experience, open
https://m.newskannada.com
on your mobile browser.
Advertisement

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ ನೂರಾರು ಜನರು ಸಾಕ್ಷಿಯಾದರು.
11:13 AM May 03, 2024 IST | Chaitra Kulal
ಧರ್ಮಸ್ಥಳ  ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಧರ್ಮಸ್ಥಳ: ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ ನೂರಾರು ಜನರು ಸಾಕ್ಷಿಯಾದರು.

Advertisement

ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಗೆ ವಧು–ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಸಭಾಭವನದಲ್ಲಿ ಹಾಜರಾದರು.

ಮುಹೂರ್ತಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಜೊತೆ ಚಿತ್ರನಟ ದೊಡ್ಡಣ್ಣ ದಂಪತಿ ಮಂಗಳ ಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು.

Advertisement

2

ಈ ವೇಳೆ ನಟ ದೊಡ್ಡಣ್ಣ ಮಾತನಾಡಿ, ತಾಯಿ-ತಂದೆ ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಕಲಿಸಿ ಸಮಾಜದ ಸಜ್ಜನರಾಗಿ, ಉತ್ತಮ ಚಾರಿತ್ರ್ಯವಂತರಾಗಿ ಮತ್ತು ಸಭ್ಯ-ಸುಸಂಸ್ಕ್ರತ ನಾಗರಿಕರನ್ನಾಗಿ ರೂಪಿಸಬೇಕು. ಈ ಮೂಲಕ ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದರು.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ಸಾಮೂಹಿಕ ವಿವಾಹದಿಂದಾಗಿ ವರದಕ್ಷಿಣೆ ಪಿಡುಗು ಮತ್ತು ಮದುವೆಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ನೂತನ ದಂಪತಿಗಳು ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಾಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿಸಬೇಕು. ಮದುವೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಂಸ್ಕಾರಯುತ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಶಾಂತಾ ದೊಡ್ಡಣ್ಣ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ನೂತನ ದಂಪತಿಗಳು ದೇವರ ದರ್ಶನ ಪಡೆದು ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಸವಿದರು.

ಸಾಮೂಹಿಕ ವಿವಾಹದ ವಿಶೇಷತೆ: ಮದುವೆಗಾಗುವ ದುಂದುವೆಚ್ಚ ಮತ್ತು ವರದಕ್ಷಿಣೆ ತಡೆಗಟ್ಟಲು 1972 ರಲ್ಲಿ 88 ಜೊತೆ ಮದುವೆಯೊಂದಿಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದರು. ಪ್ರತಿವರ್ಷ ಏಪ್ರಿಲ್/ಮೇ ತಿಂಗಳಿನಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ನಡೆಸಲಾಗುತ್ತದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಿ ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತದೆ. ಕಳೆದ ವರ್ಷದವರೆಗೆ 12,777 ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದೆ.

Advertisement
Tags :
Advertisement